February 4, 2026

ಔರಾದ:- ತಾಲ್ಲೂಕಿನ ಜಮಾಲಪೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಔರಾದ(ಬಿ) ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಆಸ್ಪತ್ರೆಗೆ ದೌಡಾಯಿಸಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ಚಿಕಿತ್ಸೆಯ ವಿವರ ಪಡೆದು, ಮಕ್ಕಳಿಗೆ ಅಗತ್ಯವಿರುವ ಎಲ್ಲ ರೀತಿಯ ಉತ್ತಮ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

 

ಈ ವೇಳೆ ಮಾತನಾಡಿದ ಶಾಸಕ ಪ್ರಭು ಚವ್ಹಾಣ ಅವರು, ಬಿಸಿಯೂಟ ಸೇವಿಸಿದ ನಂತರ ಕೆಲವು ವಿದ್ಯಾರ್ಥಿಗಳಿಗೆ ವಾಂತಿ ಬೇಧಿಯಾಗಿದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಭೇಟಿ ಮಾಡಿ ಮಾತನಾಡಿಸಿದ್ದೇನೆ‌. ವೈದ್ಯರು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದರು.

 

ಗ್ರಾಮ ಸಂಚಾರದ ವೇಳೆ ಎಲ್ಲ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಕೆಲವೊಂದು ಶಾಲೆಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಇರುವುದು ಕಂಡುಬಂದಿದೆ. ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆಹಾರ ಪದಾರ್ಥಗಳನ್ನು ಪೂರೈಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಸಲು ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದೇನೆ. ಆದರೆ ಯಾವುದೇ ಸುಧಾರಣೆಯಾಗಿಲ್ಲ ಎಂದು ಕಿಡಿ ಕಾರಿದರು.

 

ಶಾಲೆಯ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ಸಾಮಗ್ರಿ ಸರಬರಾಜು ಆಗುತ್ತಿರುವ ಬಗ್ಗೆ ಶಿಕ್ಷಣ ಇಲಾಖೆಯ ಸಚಿವರು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.

 

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಔರಾದ(ಬಿ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ. ಕಾಲ ಕಾಲಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿಲ್ಲ. ಹಾಗಾಗಿ ಅಧಿಕಾರಿಗಳ ಮೇಲೆ ನಿಯಂತ್ರಣ ಕಾಣಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಯೋಜನೆಯ ಅಧಿಕಾರಿಗಳ ವೈಫಲ್ಯವೂ ಇದರಲ್ಲಿ ಎದ್ದು ಕಾಣಿಸುತ್ತಿದೆ ಎಂದರು.

 

ಶಾಲೆಗಳಿಗೆ ಆಹಾರ ಸಾಮಗ್ರಿ ಪೂರೈಕೆದಾರರು ಕಳಪೆ ಗುಣಮಟ್ಟದ ಆಹಾರ ಪೂರೈಸುತ್ತಿದ್ದು, ಹೆಚ್ಚಿನ ಲಾಭ ಗಳಿಸುವ ದುರಾಸೆಯಿಂದ ಮಕ್ಕಳ ಆರೋಗ್ಯದೊಂದಿಗೆ ಚಲ್ಲಾಟವಾಡುತ್ತಿದ್ದಾರೆ. ಇವರ ಮೇಲೇ ಶಿಸ್ತು ಕ್ರಮವಾಗಬೇಕು. ಆಹಾರವನ್ನು ಪರಿಶೀಲಿಸದೇ ನಿರ್ಲಕ್ಷ್ಯ ತೋರಿದ ಶಾಲೆಯ ಮುಖ್ಯಗುರುಗಳ ವಿರುದ್ಧ ಕ್ರಮ ಜರುಗಿಸಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕರು ಆಗ್ರಹಿಸಿದರು.

 

ಶಾಲಾ ಮಕ್ಕಳ ಆರೋಗ್ಯದೊಂದಿಗೆ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಜರುಗುಸುವ ವರೆಗೆ ನಾನು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರರಾದ ಮಹೇಶ ಪಾಟೀಲ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771