August 7, 2026

ಔರಾದ್ : ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ವೇಳೆ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಕರ್ತವ್ಯ ಲೋಪದಿಂದ ಮತದಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಕೂಡಲೇ ಬಿಎಲ್‌ಓ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ಕಾರ್ಯಕರ್ತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷ ಆನಂದ ದ್ಯಾಡೆ ಅವರು ಮಾತನಾಡಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವುದು, ಮತದಾರರ ವಿವರಗಳನ್ನು ಪರಿಶೀಲಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಪಡೆದು ನಿಗದಿತ ಅವಧಿಯಲ್ಲಿ ಸಲ್ಲಿಸುವುದು ಬಿಎಲ್‌ಒಗಳ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ ಕೆಲವು ಕಡೆಗಳಲ್ಲಿ ಈ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದರಿಂದ ಹಲವಾರು ಮತದಾರರ ಹೆಸರುಗಳು ಪಟ್ಟಿಯಲ್ಲಿ ತಪ್ಪಾಗಿ ದಾಖಲಾಗುವ ಅಥವಾ ಕೈಬಿಡುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಮಾಹಿತಿ ಕೊರತೆ ಮತ್ತು ಸಮರ್ಪಕ ಮಾರ್ಗದರ್ಶನದ ಅಭಾವದಿಂದ ಹೆಚ್ಚಿನ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಸ್‌ಐಆರ್ ಪರಿಷ್ಕರಣೆ ಕಾರ್ಯವನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ನಡೆಸಿ, ಕರ್ತವ್ಯ ಲೋಪ ಎಸಗುವ ಬಿಎಲ್‌ಒಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಸೇರ್ಪಡೆಗೊಳ್ಳುವಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶ್ರೀಕಾಂತ ಚಿದ್ರೆ, ಬಸವ ಚೌಕಂಪಳ್ಳೆ, ಚಂದ್ರಕಾಂತ ಜೋಶಿ ಸೇರಿದಂತೆ ಇನ್ನಿತರರಿದ್ದರು.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94489 56771